ಹೊಸಶಕೆ ನ್ಯೂಸ್ -ಕೊಪ್ಪಳ : ಪ್ರಸ್ತುತ ದಿನಮಾನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಿದ ಕೆಲಸ ಕಾರ್ಯಗಳಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಹೇಳಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಜರುಗಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು. ದೇಶದಲ್ಲಿ ಪ್ರಪ್ರಥಮವಾಗಿ ಮಹಿಳೆಯರ ಶಿಕ್ಷಣಕ್ಕಾಗಿ ಹೋರಾಡಿದ ಮಹಿಳೆ ಸಾವಿತ್ರಿ ಬಾಪುಲೆ ಅವರಾಗಿದ್ದು, ಮಹಿಳೆಯರು ತಮ್ಮ ಜೀವನದಲ್ಲಿ ಸಾವಿತ್ರಿ ಬಾಪುಲೆ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಸಮಾಜದ ಪರಿವರ್ತನೆ, ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಮಾತನಾಡಿ, ಪ್ರಪಂಚದಲ್ಲಿ ಮಹಿಳೆಯರು ಕೆಲಸ ಕಾರ್ಯಗಳಲ್ಲಿ ವಹಿಸುವ ಶ್ರಮ ಹೆಚ್ಚಿದೆ. ಮನೆಯಲ್ಲಿನ ಕೆಲಸ ಕಾರ್ಯಗಳಿಂದ ಮಕ್ಕಳ ಶಿಕ್ಷಣ, ಮನೆಯ ಜವಬ್ದಾರಿ ಮಹಿಳೆಯರ ಮೇಲಿದೆ. ಮಕ್ಕಳ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಕಾರ್ಯ ನಿರ್ವಹಿಸುವಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್ ದರಗದ ಅವರು ಮಾತನಾಡಿ, ಶರಣರ ವಚನಗಳಲ್ಲಿ ಹೆಣ್ಣುಮಕ್ಕಳ ಶ್ರಮ ಮತ್ತು ಕೆಲಸ ಕಾರ್ಯಗಳ ಕುರಿತು ವರ್ಣಿಸಲಾಗಿದೆ. ಮಹಿಳೆಯರು ಆರ್ಥಿಕವಾಗಿ ಮುಂದುವರೆಯಲು ಉದ್ಯೋಗದ ಅವಶ್ಯಕತೆ ಮುಖ್ಯವಾಗಿದೆ ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಅವರು ಮಾತನಾಡಿ, ಮಹಿಳೆಯರ ಶಕ್ತಿ ಆಗಾಧವಿದೆ. ಮಕ್ಕಳ ಲಾಲನೆ ಪಾಲನೆಯಲ್ಲಿ ಕೊಪ್ಪಳ ಜಿಲ್ಲೆಯ ಅಂಗನವಾಡಿ ಶಾಲೆಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಥಮ ಸ್ಥಾನದಲ್ಲಿದ್ದು, ನಮ್ಮ ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದು ಹೇಳಿದರು.
ವಿವಿಧ ಕೇತ್ರಗಳಲ್ಲಿ ಸಾಧನಗೈದ ಮಕ್ಕಳಿಗೆ, ಅತ್ಯುತ್ತಮ ಕೆಲಸ ಕಾರ್ಯ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಅಂಗನವಾಡಿ ಸಹಾಯಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ರಂಗೋಲಿ ಸ್ಪರ್ಧೆ:ಗಳು ನಡೆದವು ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಉಪನಿರ್ದೇಶಕ ಪರುಶುರಾಮ ವೈ ಶೆಟ್ಟೆಪ್ಪನವರ್, ಜಿಲ್ಲಾ ನಿರೂಪಣಾಧಿಕಾರಿ ಗಂಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತೇಶ ಪೂಜಾರ್, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ಹರೀಶ ಜೋಗಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಯೋಜನಾಧಿಕಾರಿ ಅನ್ನಪೂರ್ಣ ಸೇರಿದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಬ್ಬಂದಿಗಳು, ಮಹಿಳೆಯರು ಮಕ್ಕಳು, ಇದ್ದರು.