ಹೊಸಶಕೆ ನ್ಯೂಸ್ -ಕೊಪ್ಪಳ : ಜಿಲ್ಲೆಯಲ್ಲಿ ಮಾದಕ ವಸ್ತುಗಳ ತಡೆಗಟ್ಟಲು ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಸಹಾಯವಾಣಿ ಕೇಂದ್ರ ಸ್ಥಾಪನೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಾದಕ ವಸ್ತುಗಳ ಉತ್ಪನ್ನ, ಸಾಗಾಟ, ಸಂಗ್ರಹ, ಮಾರಾಟ ಮತ್ತು ಬಳಕೆಯನ್ನು ತಡೆಗಟ್ಟಲು ಆರೋಗ್ಯ, ಪೊಲೀಸ್, ಅಗ್ನಿಶಾಮಕ, ಅರಣ್ಯ, ಅಬಕಾರಿ, ಪ್ರವಾಸೋದ್ಯಮ, ಪುರಾತತ್ವ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳನ್ನೊಳಗೊಂಡಂತೆ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಸಹಾಯವಾಣಿ ಕೇಂದ್ರ ಸಂಖ್ಯೆ: 08539-225311 ನ್ನು ಆರಂಭಿಸಲಾಗಿದೆ.
ಈ ಸಹಾಯವಾಣಿಯು ಪ್ರತಿದಿನ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯನಿರ್ವಹಿಸಲಿದ್ದು, ಗಾಂಜಾ ಹಾಗೂ ಮಾದಕ ವಸ್ತುಗಳ ಬಳಕೆ, ಸಂಗ್ರಹ ಹಾಗೂ ಮಾರಾಟ ಮಾಡುತ್ತಿರುವುದನ್ನು ತಡೆಯಲು ಈ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಲು ಮತ್ತು ಈ ವಿಷಯದ ಬಗ್ಗೆ ಮಾಹಿತಿ ಬೇಕಾದಲ್ಲಿ ಸಹಾಯವಾಣಿ ಮೂಲಕ ಪಡೆಯಬಹುದಾಗಿರುತ್ತದೆ.
